ದೆಹಲಿ, ಆ.09(DaijiworldNews/AA): ಅಬಕಾರಿ ನೀತಿ ಹಗರಣದಲ್ಲಿ ಸೆರೆವಾಸ ಅನುಭವಿಸುತ್ತಿರುವ ಆಮ್ ಆದ್ಮಿ ಪಕ್ಷದ ನಾಯಕ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಗಳ ಕುರಿತು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗಿದ್ದು, ಇದೀಗ ಮಹತ್ವದ ತೀರ್ಪು ಪ್ರಕಟವಾಗಿದೆ. ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ಮಂಜೂರಾಗುವ ಮೂಲಕ 17 ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಅವರು ಜೈಲುವಾಸದಿಂದ ಮುಕ್ತರಾಗಿದ್ದಾರೆ.
ರದ್ದಾದ ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿರುವ ಅಕ್ರಮಗಳಲ್ಲಿ ಭಾಗಿಯಾಗಿದ್ದಕ್ಕಾಗಿ 2023ರ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ನಂತರ ಸಿಬಿಐ ಎಫ್ಐಆರ್ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿ ಅವರನ್ನು ಮಾರ್ಚ್ ೯ರಂದು ಬಂಧಿಸಿತ್ತು. ಸಿಸೋಡಿಯ ಅವರು ಫೆಬ್ರವರಿ 28 ರಂದು ದೆಹಲಿ ಕ್ಯಾಬಿನೆಟ್ಗೆ ರಾಜೀನಾಮೆ ಸಲ್ಲಿಸಿದ್ದರು.