ಬೆಂಗಳೂರು, ಆ 9(DaijiworldNews/MS): ಆಂಧ್ರಪ್ರದೇಶದ ಮಾನವ-ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಕುಮ್ಕಿ ಆನೆಗಳನ್ನು ನೀಡುವಂತೆ ಮಾಡಿರುವ ಮನವಿ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ನೇತೃತ್ವದ ನಿಯೋಗದ ಜೊತೆ ಚರ್ಚಿಸಿದ ನಂತರ ಮಾತನಾಡಿದ ಅವರು, ಆಂಧ್ರದಲ್ಲಿ ಕಾಡಾನೆಗಳ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕದಲ್ಲಿ ಆನೆಗಳ ಹಾವಳಿ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು, ರೈಲ್ವೆ ಬ್ಯಾರಿಕೇಡ್ ಅಳವಡಿಕೆಯ ಯಶಸ್ಸು, ಕಾಡಾನೆಗಳ ಸೆರೆ ಕಾರ್ಯಾಚರಣೆ, ಆನೆ ಪಳಗಿಸುವುದು ಮತ್ತು ಮಾವುತರ ತರಬೇತಿ ಕುರಿತಂತೆ ಚರ್ಚಿಸಲಾಗಿದೆ ಎಂದರು.
ಇದೇ ೧೨ರಂದು ವಿಶ್ವ ಆನೆಯ ದಿನದಂದು ಮಾನವ- ಆನೆ ಸಂಘರ್ಷ ನಿರ್ವಹಣೆ ಕುರಿತಂತೆ ಜಿಕೆವಿಕೆಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗುವುದು ಎಂದರು.