ಮೈಸೂರು, ಆ.08(DaijiworldNews/AK): ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ , ಜೆಡಿಎಸ್ ನ ಜನತಂತ್ರ ವಿರೋಧಿ ಸರ್ವಾಧಿಕಾರಿ ದುರಾಡಳಿತವನ್ನು ವಿರೋಧಿಸಿ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು.ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ ಎಂದರು.
ಜೆಡಿಎಸ್ ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ.ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ ಎಂದರು.
ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983 ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250ರೂ ಡೆಪಾಸಿಟ್ ಕಟ್ಟಿದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದರು. ಆ ಚುನಾವಣೆಯಲ್ಲಿ ಜನರೇ 63 ಸಾವಿರ ರೂಪಾಯಿ ಖರ್ಚು ಮಾಡಿ ನನ್ನನ್ನು ಆರಿಸಿದರು ಎಂದು ತಮ್ಮ ಸಚ್ಚಾರಿತ್ರ್ಯದ ಚರಿತ್ರೆಯನ್ನು ಬಿಚ್ಚಿಟ್ಟರು.
ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ಸೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಎಚ್ಚರಿಸಿದರು.
ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ. ದಲಿತರು, ಶೋಷಿತರು, ಅಲ್ಪಸಂಖ್ಯಾತರ ಹಾಗೂ ಸಮಸ್ತ ಜನರ ಏಳಿಗೆಗಾಗಿ ಮಾತ್ರ ನನ್ನ ಅಧಿಕಾರ ಮುಡಿಪಾಗಿಟ್ಟಿದ್ದೇನೆ ಎಂದರು.
ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಳುಗಾಡಿಸಲು ಸಾಧ್ಯವಿಲ್ಲ ಎಂದರು.
ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ ಎಂದರು.
ಹಗರಣವೇ ಅಲ್ಲದ ಮೂಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು ಎಂದು ಆಕ್ರೋಶ ವ್ಯಕ್ತಪಡಿಸಿದರು.ನನ್ನದೊಂದು ಪತ್ರ ಇಲ್ಲ, ನನ್ನದೊಂದು ಸಹಿ ಇಲ್ಲ, ಆಗ ನಮ್ಮ ಸರ್ಕಾರ ಅಧಿಕಾರದಲ್ಲೂ ಇರಲಿಲ್ಲ. ಆದರೂ ಹಗರಣ, ಹಗರಣ ಎಂದು ಬೊಬ್ಬೆ ಹಾಕುತ್ತಾ ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ಇದಕ್ಕೆ ನೀವ್ಯಾರೂ ಸೊಪ್ಪು ಹಾಕಬೇಡಿ, ನಂಬಬೇಡಿ ಎಂದು ಕರೆ ನೀಡಿದರು.
ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ?ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು. ಸುಪ್ರೀಕೋರ್ಟ್ ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ ಎಂದರು.ಯಡಿಯೂರಪ್ಪ ಅವರು ಚೆಕ್ ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ ಎಂದು ಪ್ರಶ್ನಿಸಿದರು.
ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ಸೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಎಚ್ಚರಿಸಿದರು.