ನವದೆಹಲಿ, ಆ.09(DaijiworldNews/AA): ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಹಿನ್ನೆಲೆ ಭಾರತ-ಬಾಂಗ್ಲಾದೇಶದ ಗಡಿಯಲ್ಲಿ ಸದ್ಯದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ನಡೆಸಲು ಹಿಂದೂಗಳು ಸೇರಿದಂತೆ ಇತರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆಗೆ ಕೇಂದ್ರ ಸರ್ಕಾರ ಸಮಿತಿ ರಚಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, 'ಬಾಂಗ್ಲಾದೇಶದಲ್ಲಿ ವಾಸಿಸುತ್ತಿರುವ ಭಾರತೀಯ ಪ್ರಜೆಗಳು, ಹಿಂದೂಗಳು ಸೇರಿದಂತೆ ಇತರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪೂರ್ವ ಕಮಾಂಡ್ನ ಗಡಿ ಭದ್ರತಾ ಪಡೆ ಎಡಿಜಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಬಾಂಗ್ಲಾದೇಶದ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ' ಎಂದು ತಿಳಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಇದೀಗ ಈ ಹಿಂಸಾತ್ಮಕ ಪ್ರತಿಭಟನೆಯು ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಪ್ರತಿಭಟನಾಕಾರರು ಅಲ್ಪಸಂಖ್ಯಾತ ಹಿಂದೂಗಳ ಮನೆ, ಉದ್ಯಮ ಹಾಗೂ ದೇವಸ್ಥಾನಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಜೊತೆಗೆ ಹಿಂದೂ ಮಹಿಳೆಯರನ್ನು ಗುರಿಯಾಗಿಸಿಕೊಂಡು ಪ್ರತಿಭಟನಾಕಾರರು ದಾಳಿ ನಡೆಸುತ್ತಿದ್ದಾರೆ. ಇದರಿಂದಾಗಿ ಬಾಂಗ್ಲಾದಲ್ಲಿ ಹಿಂದೂಗಳಿಗೆ ಸುರಕ್ಷತೆ ಇಲ್ಲದಂತಾಗಿದೆ.