ಮ್ಯಾಂಚೆಸ್ಟರ್, ಜು. 23 (DaijiworldNews/AK): ಇಂಗ್ಲೆಂಡ್ ಮತ್ತು ಭಾರತ ನಡುವಿನ 4ನೇ ಟೆಸ್ಟ್ ಪಂದ್ಯಕ್ಕೆ ಐತಿಹಾಸಿಕ ಮ್ಯಾಂಚೆಸ್ಟರ್ ಕ್ರೀಡಾಂಗಣ ಸಜ್ಜಾಗಿದೆ. ಇದೀಗ ನಡೆಯುತ್ತಿರುವ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯಲ್ಲಿ ಆತಿಥೇಯ ಇಂಗ್ಲೆಂಡ್ ತಂಡವು 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಇಂಗ್ಲೆಂಡ್ ಸರಣಿ ಗೆಲ್ಲಲು ಇನ್ನೊಂದು ಗೆಲುವಿನ ಅಗತ್ಯವಿದೆ. ಆದರೆ ಭಾರತ ಸರಣಿ ಗೆಲ್ಲಲು ಇನ್ನುಳಿದ ಎರಡೂ ಪಂದ್ಯಗಳನ್ನೂ ಗೆಲ್ಲಬೇಕಾದ ಅನಿವಾರ್ಯತೆ ಇದೆ. 4ನೇ ಟೆಸ್ಟ್ ಪಂದ್ಯ ಇಂದಿನಿಂದ 4ನೇ ಟೆಸ್ಟ್ ನಡೆಯಲಿದೆ. ಮಧ್ಯಾಹ್ನ 3:30ಕ್ಕೆ ಪಂದ್ಯ ಶುರುವಾಗಲಿದೆ.

ಮ್ಯಾಂಚೆಸ್ಟರ್ ಪಂದ್ಯಕ್ಕೆ ಟೀಂ ಇಂಡಿಯಾದ ಮೂವರು ಆಟಗಾರರು ಅಲಭ್ಯರಾಗಿದ್ದಾರೆ. 3ನೇ ಟೆಸ್ಟ್ ಪಂದ್ಯದ ಬಳಿಕ ನಡೆದ ಅಭ್ಯಾಸದ ವೇಳೆ ಟೀಮ್ ಇಂಡಿಯಾದ ಎಡಗೈ ವೇಗಿ ಅರ್ಷ್ದೀಪ್ ಸಿಂಗ್ ಅವರ ಕೈಗೆ ಗಾಯವಾಗಿದ್ದು, ಹೀಗಾಗಿ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಲ್ಲೂ ಅವರು ಕಾಣಿಸಿಕೊಳ್ಳುವುದಿಲ್ಲ. ಇನ್ನೂ ಎಜ್ಬಾಸ್ಟನ್ನಲ್ಲಿ ಐತಿಹಾಸಿಕ ಗೆಲುವಿಗೆ ಕಾರಣವಾಗಿದ್ದ ವೇಗಿ ಆಕಾಶ್ ದೀಪ್ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಲಾರ್ಡ್ಸ್ ಟೆಸ್ಟ್ ಪಂದ್ಯದ 4ನೇ ದಿನದಾಟದಂದು ತೊಡೆಸಂದು ಗಾಯದ ಸಮಸ್ಯೆಗೆ ಒಳಗಾಗಿದ್ದ ಆಕಾಶ್ ದೀಪ್ ದ್ವಿತೀಯ ಇನಿಂಗ್ಸ್ನಲ್ಲಿ ಕೇವಲ 8 ಓವರ್ಗಳನ್ನು ಮಾತ್ರ ಎಸೆದಿದ್ದರು. ಹೀಗಾಗಿ ಜಸ್ಪ್ರೀತ್ ಬುಮ್ರಾ ಅವರು ಟೀಂ ಇಂಡಿಯಾ ಬೌಲಿಂಗ್ ಪಡೆಯನ್ನ ಮುನ್ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಲ್ಲದೇ ಟೀಮ್ ಇಂಡಿಯಾದ ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಕೂಡ ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಜಿಮ್ನಲ್ಲಿನ ತರಬೇತಿ ವೇಳೆ ಅವರ ಮೊಣಕಾಲಿಗೆ ಗಾಯವಾಗಿದ್ದು, ಹೀಗಾಗಿ ಇಂಗ್ಲೆಂಡ್ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಂದ ಅವರು ಹೊರಬಿದ್ದಿದ್ದಾರೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ನಿತೀಶ್ ಕುಮಾರ್ ಬದಲಿಗೆ ಅನ್ಶುಲ್ ಕಾಂಬೋಜ್ ಅವರನ್ನು ಕಣಕ್ಕಿಳಿಸಲಿದೆ ಭಾರತ ಎಂದು ತಿಳಿದುಬಂದಿದೆ.