ಮುಂಬೈ, ಅ. 06 (DaijiworldNews/AK): ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೂ ಮುನ್ನ ಭಾರತ ಏಕದಿನ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ವಜಾಗೊಳಿಸಲಾಗಿದೆ. ಅಲ್ಲದೆ ಟೀಮ್ ಇಂಡಿಯಾದ ಒಡಿಐ ಕ್ಯಾಪ್ಟನ್ ಆಗಿ ಶುಭ್ಮನ್ ಗಿಲ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಭಾರತ ತಂಡದಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದ ಯುಗಾಂತ್ಯವಾದಂತಾಗಿದೆ.

ಅತ್ತ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿ, ಭಾರತ ತಂಡಕ್ಕೆ ಚಾಂಪಿಯನ್ ಪಟ್ಟ ತಂದುಕೊಟ್ಟರೂ ರೋಹಿತ್ ಶರ್ಮಾ ಅವರನ್ನು ಏಕಾಏಕಿ ನಾಯಕತ್ವದಿಂದ ಕೆಳಗಿಸಿದ್ದು ಯಾಕೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಇದೀಗ ಎಲ್ಲರೂ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ನತ್ತ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ.
ಗೌತಮ್ ಗಂಭೀರ್ ನಿರ್ದೇಶನದ ಮೇರೆಗೆ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ ಗಂಭೀರ್ ಅವರ ಹಳೆಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಟೀಮ್ ಇಂಡಿಯಾ ಕೋಚ್, ರೋಹಿತ್ ಶರ್ಮಾ ಅವರನ್ನು ಹಾಡಿ ಹೊಗಳುತ್ತಿರುವುದು ಕಾಣಬಹುದು.
ರೋಹಿತ್ ಶರ್ಮಾ ಭಾರತ ತಂಡದ ನಾಯಕನಾಗದಿದ್ದರೆ, ಅದು ಭಾರತದ ದುರದೃಷ್ಟ. ಬದಲಾಗಿ ರೋಹಿತ್ ಶರ್ಮಾ ಅವರದ್ದಲ್ಲ. ಅವರು ವೈಟ್-ಬಾಲ್ ಕ್ರಿಕೆಟ್ ಅಥವಾ ಟಿ20 ಕ್ರಿಕೆಟ್ನಲ್ಲಿ ನಾಯಕನಾಗದಿದ್ದರೆ, ಅದು ನಾಚಿಕೆಗೇಡಿನ ಸಂಗತಿ ಎಂದು ಗೌತಮ್ ಗಂಭೀರ್ ಈ ಹಿಂದೆ ಅಭಿಪ್ರಾಯಪಟ್ಟಿದ್ದರು.