ದುಬೈ, ನ. 05 (DaijiworldNews/SM): ಇಲ್ಲಿನ ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ಟಿ-20 ವಿಶ್ವಕಪ್ ನ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಕಾಟ್ ಲ್ಯಾಂಡ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಸ್ಕಾಟ್ ಲ್ಯಾಂಡ್ ತಂಡ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿತು. ಅಂತಿಮವಾಗಿ 17.4 ಓವರ್ ಗಳಲ್ಲಿ 85 ರನ್ ಗಳನ್ನು ಗಳಿಸಲಷ್ಟೇ ಶಕ್ತವಾಯಿತು.
ಗುರಿ ಬೆನ್ನತ್ತಿದ ಟೀಂ ಇಂಡಿಯಾ 6.3 ಓವರ್ ಗಳಲ್ಲಿ ಎರಡು ವಿಕೆಟ್ ಗಳ ನಷ್ಟಕ್ಕೆ 89 ರನ್ ಗಳಿಸಿ ಗೆಲುವಿನ ನಗೆ ಚೆಲ್ಲಿತು. ಆರಂಭಿಕ ಆಟಗಾರ ಕೆ.ಎಲ್. ರಾಹುಲ್ 19 ಎಸೆತಗಳನ್ನು ಎದುರಿಸಿ 6 ಬೌಂಡರಿಗಳು ಹಾಗೂ 3 ಸಿಕ್ಸರ್ ಗಳ ನೆರವಿನಿಂದ 50 ರನ್ ಸಿಡಿಸಿದರು. ಮತ್ತೊಂದೆಡೆ ರೋಹಿತ್ 30 ರನ್ ಗಳಿಸಿ ತಂಡದ ಗೆಲುವಿಗೆ ನೆರವಾದರು.