ಬೆಂಗಳೂರು, ಫೆ 15 (DaijiworldNews/ AK): ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗಳಿಸುವ ಕ್ರೀಡಾಪಟುಗಳಿಗೆ 6 ಕೋಟಿ ರೂ. ಬೆಳ್ಳಿ ಪದಕ ಪಡೆಯುವ ಕ್ರೀಡಾಪಟುಗಳಿಗೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಪಡೆಯುವ ಕ್ರೀಡಾಪಟುಗಳಿಗೆ 3 ಕೋಟಿ ರೂ. ಪ್ರೋತ್ಸಾಹಧನವನ್ನು ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.
ಇದೇ 2024ರ ಜುಲೈ 26ರಿಂದ ಆಗಸ್ಟ್ 11ರ ವರೆಗೆ ಪ್ಯಾರಿಸ್ನಲ್ಲಿ ಒಲಿಂಪಿಕ್ಸ್ ಕ್ರೀಡಾಹಬ್ಬ ನಡೆಯಲಿದೆ. ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಿಎಂ ತಮ್ಮ ಬಜೆಟ್ನಲ್ಲಿ ಪ್ರೋತ್ಸಾಹ ಧನ ಘೋಷಣೆ ಮಾಡಿದ್ದಾರೆ.
ಅಲ್ಲದೇ ಕ್ರೀಡಾಪಟುಗಳಿಗೆ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಶೇ.2 ರಷ್ಟು ಹುದ್ದೆಯಲ್ಲಿ ಮೀಸಲಾತಿ. ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ 70 ಎಕರೆ ಪ್ರದೇಶದಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾ ನಗರ ಸ್ಥಾಪನೆ ಹಾಗೂ 4 ಅತ್ಯಾಧುನಿಕ ಕ್ರೀಡಾ ಸಂಕೀರ್ಣಗಳ ನಿರ್ಮಾಣ ಮಾಡುವುದಾಗಿ ಬಜೆಟ್ನಲ್ಲಿ ಫೋಷಿಸಲಾಗಿದೆ.
ಏಷ್ಯನ್ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ 35 ಲಕ್ಷ ರೂ., ಬೆಳ್ಳಿ ಪದಕ ವಿಜೇತ ಕ್ರೀಡಾಪಟುಗಳಿಗೆ 25 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತ ಕ್ರೀಡಾಪಟುಗಳಿಗೆ 15 ಲಕ್ಷ ರೂ. ಪ್ರೋತ್ಸಾಹಧನ ನೀಡಲು ಕ್ರಮಕೈಗೊಳ್ಳಲಾಗುವುದು.
ಇದರ ಜೊತೆಗೆ ರಾಜ್ಯದ 14 ಸ್ಥಳಗಳಲ್ಲಿ ಮುಂದಿನ ಎರಡು ವರ್ಷದೊಳಗೆ 35 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯ, ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡ ನಿರ್ಮಾಣ ಹಾಗೂ 10 ಕೋಟಿ ರೂ. ವೆಚ್ಚದಲ್ಲಿ ಬಳ್ಳಾರಿಯಲ್ಲಿ ಕ್ರೀಡಾ ವಸತಿ ನಿಲಯದ ಉನ್ನತೀಕರಣ ಹಾಗೂ ಕ್ರೀಡಾ ಸೌಕರ್ಯಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಜೆಟ್ನಲ್ಲಿ ಕ್ರೀಡೆಗೆ ಪ್ರೋತ್ಸಾಹವನ್ನು ನೀಡಿದ್ದಾರೆ.