ಬೆಂಗಳೂರು, ಫೆ 22(DaijiworldNews/SK): ಬಹುನಿರೀಕ್ಷಿತ 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಹೀಗಿರುವಾಗಲೇ ಗುಜರಾತ್ ಟೈಟಾನ್ಸ್ ತಂಡಕ್ಕೆ ಬಹು ದೊಡ್ಡ ಹೊಡೆತ ಬಿದಿದ್ದು, ಟೀಮ್ ಇಂಡಿಯಾದ ಹಿರಿಯ ಹಾಗೂ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರು ಈ ಬಾರಿಯ ಐಪಿಎಲ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದುಬಂದಿದೆ.
2024ರ ಐಪಿಎಲ್ ಟೂರ್ನಿಗೂ ಮುನ್ನ ಗುಜರಾತ್ ಟೈಟಾನ್ಸ್ ಪಾಲಿಗೆ ಒಂದರ ಮೇಲೊಂದು ಹೊಡೆತ ಬೀಳುತ್ತಿವೆ. ಈ ಹಿಂದೆ ನಾಯಕನಾಗಿದ್ದ ಹಾರ್ದಿಕ್ ಪಾಂಡ್ಯ ತಂಡವನ್ನು ತೊರೆದು ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿದ್ದಾರೆ. ಈ ಶಾಕ್ನಿಂದ ಹೊರಬರುವ ಮುನ್ನವೇ ಗುಜರಾತ್ ಟೈಟಾನ್ಸ್ ಪಾಲಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಗುಜರಾತ್ ಟೈಟಾನ್ಸ್ ತಂಡದ ಆಟಗಾರನಾಗಿದ್ದ, ಅನುಭವಿ ವೇಗಿ ಮೊಹಮ್ಮದ್ ಶಮಿ ಕೂಡಾ ಇದೀಗ ಗಾಯದ ಸಮಸ್ಯೆಯಿಂದಾಗಿ ಸಂಪೂರ್ಣ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಶಮಿ ಅವರು ವಿಶ್ವಕಪ್ ವೇಳೆಯೇ ಪಾದದ ನೋವಿನಿಂದ ಬಳಲುತ್ತಿದ್ದರು. ಆದರೆ ಅವರು ಈ ಗಾಯಕ್ಕೆ ಚುಚ್ಚು ಮದ್ದು ತೆಗೆದುಕೊಂಡು ದೇಶಕ್ಕಾಗಿ ಆಡಿದ ವಿಚಾರ ತಡವಾಗಿ ಬೆಳಕಿಗೆ ಬಂದಿತ್ತು. ಈ ವಿಚಾರಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಇದೀಗ ಅವರು ಲಂಡನ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದು ಮುಂದಿನ ತಿಂಗಳು ಆರಂಭಗೊಳ್ಳಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಆದರೆ ಇದರ ಕುರಿತಾಗಿ ಬಿಸಿಸಿಐ ಯಾವುದೇ ಅಧಿಕೃತ ಮಾಹಿತಿಯನ್ನು ಇದುವರೆಗೆ ನೀಡಿಲ್ಲ.