ಕಟಕ್ , ಸೆ 03 (DaijiworldNews/MS): ಒಡಿಶಾದ ಕಟಕ್ ನ ವಿಶೇಷ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರ ಮೃತದೇಹ ಅಧಿಕೃತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
49 ವರ್ಷದ ಸುಭಾಷ್ ಕುಮಾರ್ ಬಿಹಾರಿ ಅವರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ನ್ಯಾಯಾಲಯದ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಎರಡು ದಿನಗಳಿಂದ ರಜೆಯಲ್ಲಿದ್ದ ಅವರು ಶುಕ್ರವಾರ ಕೆಲಸಕ್ಕೆ ಹಾಜರಾಗಬೇಕಿತ್ತು.
ನ್ಯಾಯಾಧೀಶರ ಮೃತದೇಹ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅವರ ಕುತ್ತಿಗೆಯಲ್ಲಿ ಗಾಯದ ಗುರುತುಗಳಿವೆ ಎಂದು ಸಹಾಯಕ ಪೊಲೀಸ್ ಕಮಿಷನರ್ ತಪಸ್ ಪ್ರಧಾನ್ ಹೇಳಿದ್ದಾರೆ.
ನ್ಯಾಯಾಧೀಶರ ಪತ್ನಿ ಹಾಗೂ ಇಬ್ಬರು ಪುತ್ರಿಯರು ಸ್ಥಳೀಯ ಮಾರುಕಟ್ಟೆಗೆ ತೆರಳಿದ್ದರು. ಮಧ್ಯಾಹ್ನ 1 ಗಂಟೆಗೆ ಹಿಂತಿರುಗಿದಾಗ ಮುಖ್ಯ ಬಾಗಿಲಿಗೆ ಬೀಗ ಹಾಕಿರುವುದು ಕಂಡು ಬಂತು. ಅವರು ಬಲವಂತವಾಗಿ ಬಾಗಿಲು ತೆರೆದಾಗ ನ್ಯಾಯಾಧೀಶರು ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಟಕ್ನ ಎಸ್ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಾಥಮಿಕವಾಗಿ ಆತ್ಮಹತ್ಯೆ ಆಗಿರಬಹುದು ಎಂದು ಶಂಕಿಸಲಾಗಿದೆ. ಅವರು ತಮ್ಮ ಕೆಲಸದಲ್ಲಿ ತೊಡಗಿಸಿಕೊಂಡಿದ್ದರಿಂದ ಹೆಚ್ಚು ಮಾತನಾಡುತ್ತಿರಲಿಲ್ಲ. ಕಟಕ್ನಲ್ಲಿರುವ ನ್ಯಾಯಾಧೀಶರ ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳ ಬಗ್ಗೆ ತನಗೆ ತಿಳಿದಿಲ್ಲ ಎಂದು ಮೃತ ಜಡ್ಜ್ ಸಹೋದರ ತಿಳಿಸಿದ್ದಾರೆ.